“ಗದಗ ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗೃತೆ ವಹಿಸಬೇಕು. ಜನರಲ್ಲಿ ಭಯ ಬೇಡ, ಜಾಗೃತಿ ಇರಲಿ. ಕೋವಿಡ್ ಉಲ್ಭಣಿಸಿದಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ” ಎಂದು ಸಚಿವ ಡಾ. ಎಚ್. ಕೆ. ಪಾಟೀಲ ಅವರು ಸೂಚನೆ ನೀಡಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೋವಿಡ್ ಮುಂಜಾಗೃತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಮಾತನಾಡಿದರು.
“ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಬೇಕು” ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಪ್ರತೀ ವಾರಕ್ಕೊಮ್ಮೆ ಕೋವಿಡ್ ಹರಡುವಿಕೆ ಪರಿಸ್ಥಿತಿಯ ಪರಿಶೀಲನೆಯನ್ನು ಜಿಲ್ಲಾಡಳಿತ ನಡೆಸುತ್ತಾ ತೀವ್ರ ನಿಗಾ ಇಡಬೇಕು ಎಂದರು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪಾಲಕರು ಗಮನಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣ ಇರುವ ಮಕಗಕಳನ್ನು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕು” ಎಂದು ಎಚ್ ಕೆ ಪಾಟೀಲ ಅವರು ತಿಳಿಸಿದರು.
“ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ನೋಡಿಕೊಳ್ಳಿ. ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲಾ ಆಸ್ಪತ್ರೆಗಳೂ ಸೇರಿದಂತೆ ಎಲ್ಲ ಆಸ್ಪತ್ರೆಗಳು ಕೋವಿಡ್ ಸೋಂಕಿತರ ಆರೈಕೆಗೆ ಸರ್ವ ಸನ್ನದ್ಧವಾಗಿ ಇರುವಂತೆ” ಸೂಚಿಸಿದರು.
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಪಾಲನೆ ಕಡ್ಡಾಯ. ಸದ್ಯಕ್ಕೆ ರಾಜ್ಯ ಜಿಲ್ಲೆಯಲ್ಲಿ ಅಂತಹ ತುರ್ತು ಇಲ್ಲದಿದ್ದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಡ್ಡಾಯವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು. ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.
“ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ಗದಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ವರಿಯಾಗದಿದ್ದರು ಸಹ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಮಾತನಾಡಿ, ಸಾರ್ವಜನಿಕರಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು” ಎಂದು ಸಲಹೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ವಸತಿ ನಿಲಯದಲ್ಲಿ ಸೌಕರ್ಯಗಳನ್ನು ನೀಡುತ್ತಿಲ್ಲ: ವಿದ್ಯಾರ್ಥಿಗಳು ಆರೋಪ
ಸಭೆಯಲ್ಲಿ ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಮಾತನಾಡಿದರು. ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೆಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಿಎಚ್ಒ ಡಾ. ಎಸ್ ಎಸ್ ನೀಲಗುಂದ ಅವರುಗಳು ಸಭೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮಾಡಲಾದ ಸಿದ್ದತೆ, ಅನುಸರಿಸುವ ಕ್ರಮಗಳ ಮಾಹಿತಿ ಒದಗಿಸಿದರು.
ಸಭೆಯಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ನಗರಾಭಿವೃದ್ಧಿ ಕೋಷದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಬಿ ಸಿ ಕರೆಗೌಡ್ರ, ಆರೋಗ್ಯ ಇಲಾಖೆ ಕಾರ್ಯಕ್ರಮ ಅಧಿಕಾರಿಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶಿಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.
