ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಆಗಿ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.
ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹಾಗಾಗಿ, ಈ ಬಗ್ಗೆ ಜಿಲ್ಲೆಯ ಬಗ್ಗೆ ಮಾಹಿತಿ ಇರುವ ಹರಿಪ್ರಸಾದ್ ಅವರಲ್ಲಿ ಮಾತುಕತೆ ನಡೆಸಿದ್ದೇನೆ. ಯಾರು ಎಷ್ಟೇ ಪ್ರಭಾವಿ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಮಂಗಳೂರಿನಲ್ಲಿ ಕೋಮು ಸಾಮರಸ್ಯ ನೆಲೆಸುವಂತೆ ಮಾಡಿ, ಸೌಹಾರ್ದಯುತವಾಗಿ ಜನರು ಬದುಕುವಂತೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇವೆ” ಎಂದು ತಿಳಿಸಿದರು.
ಸಿಎಂ ಭೇಟಿಯ ವೇಳೆ ಹರಿಪ್ರಸಾದ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ಬಗ್ಗೆ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆಗೊಳಿಸಿ, ನಿಷ್ಪಕ್ಷತವಾಗಿ ಕಾರ್ಯ ನಿರ್ವಹಿಸುವ ಉನ್ನತ ಪೊಲೀಸ್ ಅಧಿಕಾರಿಗಳನ್ನು ನೇಮಿಸುವ ಬಗ್ಗೆಯೂ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ.
ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಈ ವೇಳೆ ಹಾಜರಿದ್ದರು.