ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ನಡುವಿನ ಸಾಗರ್ ದ್ವೀಪ ಮತ್ತು ಖೇಪುಪಾರ ಪ್ರದೇಶಗಳ ಬಳಿಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದೆ. ಇದರಿಂದ, ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಹಠಾತ್ ಭಾರೀ ಮಳೆಯಾಗಲಿದ್ದು, ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ
ಈಶಾನ್ಯ ರಾಜ್ಯಗಳಾದ ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರ, ಸಿಕ್ಕಿಂ, ಅಸ್ಸಾಂ ಮತ್ತು ಪೂರ್ವ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ದಕ್ಷಿಣ ರಾಜ್ಯಗಳಾದ ಕರ್ನಾಟಕ, ಗೋವಾ ಹಾಗೂ ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ರಾಜ್ಯಗಳ ಪೈಕಿ ಬಹುತೇಕ ರಾಜ್ಯಗಳಲ್ಲಿ 300 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
ಹೆಚ್ಚು ಮಳೆಯಾಗುವ ಕಾರಣ ಮಣ್ಣಿನ ಸವಕಳಿ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು. ಭೂಕುಸಿತವೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಡಿಢೀರ್ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ. ಮೀನುಗಾರರು ಜೂನ್ 1ರವರೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.