ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡ ಆಯೋಜಿಸಿದ್ದ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳಲ್ಲಿ 10 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಭಿಮಾನಿಗಳು ಸಂಭ್ರಮಿಸುವ ಭರದಲ್ಲಿ ಜೀವ ತೆತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಜನರು ಗದ್ದಲಗಳಲ್ಲಿ ಸಿಲುಕಿಕೊಳ್ಳದೆ ತಮ್ಮ ಮನೆಗಳಿಗೆ ಮರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.
