ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಪ್ರಕರಣದ ತನಿಖೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಸಲು ಆದೇಶಿಸಲಾಗಿತ್ತು. ಇದೀಗ, ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, “ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಬೆಂಗಳೂರು ಸೆಂಟ್ರಲ್ ಡಿಸಿಪಿ, ಬೆಂಗಳೂರು ಸೆಂಟ್ರಲ್ ಎಸಿಪಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿಯನ್ನು ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.