ಐಪಿಎಲ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂಭ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ. ದಯಾನಂದ್ ಅಮಾನತಿನಿಂದ ತೆರವಾದ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ.
ಸೀಮಂತ್ ಕುಮಾರ್ ಅವರು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್‌ನ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ, ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆಗೆ ವರ್ಗಾಯಿಸಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಕಾರ್ಯದರ್ಶಿ ಟಿ ಮಹಂತೇಶ್ ಆದೇಶ ಹೊರಡಿಸಿದ್ದಾರೆ.
ಜೂನ್ 3ರಂದು ನಡೆದ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆದ್ದು, ಚಾಂಪಿಯನ್ ಆಗಿತ್ತು. ಆರ್‌ಬಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಮತ್ತು ಅವ್ಯವಸ್ಥೆಯ ಕಾರಣದಿಂದಾಗಿ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿರುವ ಸರ್ಕಾರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಬೆಂಗಳೂರು ಸೆಂಟ್ರಲ್ ಡಿಸಿಪಿ, ಬೆಂಗಳೂರು ಸೆಂಟ್ರಲ್ ಎಸಿಪಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿಯನ್ನು ಅಮಾನತು ಮಾಡಿದೆ.