ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರನ್ನು ಧಾರವಾಡದಲ್ಲಿ ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಹತ್ಯೆಯ ಹಿಂದೆ ಆಗ ಸಚಿವರಾಗಿದ್ದ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಪಟ್ಟಿ ಸಲ್ಲಿಸಿತ್ತು. 2020ರ ನೆವೆಂಬರ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ 9 ತಿಂಗಳು ಸೆರೆವಾಸ ಅನುಭವಿಸಿದ್ದ ಕುಲಕರ್ಣಿ ಅವರಿಗೆ 2021ರ ಆಗಸ್ಟ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಧಾರವಾಡ ಜಿಲ್ಲಾ ವ್ಯಾಪ್ತಿಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು.
ಇದೀಗ, ವಿನಯ್ ಕುಲಕರ್ಣಿ ಅವರು ಜೈಲಿನಿಂದ ಹೊರಗಿದ್ದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ, ಬೆದರಿಕೆ, ಒತ್ತಡ ಹಾಕುವ ಸಾಧ್ಯತೆಗಳಿವೆ. ಹೀಗಾಗಿ, ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಸಿಬಿಐ ಅರ್ಜಿಯನ್ನು ಪುರಸ್ಕರಿಸಿದೆ. ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿದೆ. ಹೀಗಾಗಿ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ವಿನಯ್ ಕುಲಕರ್ಣಿ ಅವರು ಧಾರವಾಡ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಧಾರವಾಡ ಜಿಲ್ಲೆಗೆ ಪ್ರವೇಅಸ ನಿರ್ಬಂಧಿಸಿದ್ದರ ಹೊರತಾಗಿಯೂ 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರ ಪರಿವಾಗಿ ಅವರ ಪತ್ನಿ ಪ್ರಚಾರ ನಡೆಸಿದ್ದರು. ಆ ವೇಳೆ, ಧಾರವಾಡ ಪ್ರವೇಶ ಕೋರಿ ಕುಲಕರ್ಣಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರವೇಶ ನೀಡಲು ಹೈಕೋರ್ಟ್ ನಿರಾಕರಿಸಿತ್ತು.