ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದ ತೋತಾಪುರಿ ಮಾವು ಖರೀದಿ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳನ್ನು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿಗಳು ಜೂನ್ 07 ರಂದು ಆದೇಶ ಹೊರಡಿಸಿದ್ದರು. ಈ ಏಕಪಕ್ಷೀಯ ಕ್ರಮವು ಕರ್ನಾಟಕದ ಮಾವು ಬೆಳೆಗಾರರಿಗೆ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ತೋತಾಪುರಿ ಮಾವು ಬೆಳೆಯುವವರಿಗೆ ಹೆಚ್ಚಿನ ತೊಂದರೆಯಾಗಿದೆ.
ರಾಜ್ಯದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಚಿತ್ತೂರು ಮೂಲದ ಸಂಸ್ಕರಣಾ ಘಟಕಗಳೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ. ಈ ನಿರ್ಬಂಧ ಪೂರೈಕೆ ಸರಪಳಿಗೆ ಅಡ್ಡಿಪಡಿಸಿದೆ. ಇದರಿಂದ ಮಾವು ಬೆಳೆಗಾರರಿಗೆ ನಷ್ಟ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನೀವು (ಚಂದ್ರಬಾಬು ನಾಯ್ಡು) ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸುತ್ತೇನೆ ಮತ್ತು ಚಿತ್ತೂರು ಜಿಲ್ಲಾಡಳಿತದ ಆದೇಶವನ್ನು ತಕ್ಷಣವೇ ರದ್ದುಗೊಳಿಸಲು ಜಿಲ್ಲೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.