ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
13 ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ, ವಕೀಲರಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ತಮ್ಮ ನಡೆಯನ್ನು ವಿಧಾನಸೌಧ ಹಾಗೂ ವಕೀಲರ ಪರಿಷತ್ ಗಳ ಮುಂದೆ ಹಮ್ಮಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಮನವಿ ಪುರಸ್ಕರಿಸಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಿ. ಟಿ. ವಿಶ್ವನಾಥ್, ರಾಜ್ಯ ಸಮಿತಿ ಸದಸ್ಯರಾದ ಆರ್. ತಿಮ್ಮೆಗೌಡ ಹಾಗೂ ನ್ಯಾಯವಾದಿಗಳಾದ ಎಂ. ಮಹೇಶ್, ಯೋಗೇಶ್, ಸುನಿಲ್, ಕಿಶೋರ್, ಕೆಂಪಯ್ಯ
ಮೊದಲಾದವರು ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರಕ್ಕೆ ಕಳಿಸಿಕೋಡುವಂತೆ ವಿನಂತಿಸಿದರು.

ಹಕ್ಕೋತ್ತಾಯ…….
- ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ -2024 ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು.
- ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ (AIBE) ರದ್ದು ಪಡಿಸಬೇಕು.
- ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ ರೂ.10,000/- ಸ್ಟೈಫಂಡ್ (ಸಹಾಯ ಧನ) ನೀಡಬೇಕು.
- ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ರೂ.5 ಲಕ್ಷ ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ.10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು.
- ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈಧ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
- ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು.
- ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
- ರಾಜ್ಯದಲ್ಲಿನ ಎಲ್ಲ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್‌ಗಳನ್ನು ಸ್ಥಾಪಿಸಬೇಕು.
- ರವೆನ್ಯೂ AC, DC ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವದರಿಂದ ಕಂದಾಯ ಪ್ರಕ್ರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು.
- ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು.
- ರಾಜ್ಯದ ಪ್ರತೀ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು ಹಾಗೂ ಈಗಿರುವ ಅನುದಾನಿತ & ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
- ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಕಛೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು.
ಈ ಸುದ್ದಿ ಓದಿದ್ದೀರಾ?ಮಂಡ್ಯ | ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಶಾಸಕ ದರ್ಶನ್ ಪುಟ್ಟಣ್ಣಯ್ಯ
- ವಕೀಲರ ಸಂಘದ/ ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕು. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸರ ಪ್ರಾತಿನಿತ್ಯ ನೀಡಬೇಕು.