- ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ
- ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಬಿಜೆಪಿಯ ಹತ್ತು ಶಾಸಕರನ್ನು ಸಭಾಧ್ಯಕ್ಷರು ಅಮಾನತು ಮಾಡಿದ ಕ್ರಮ ಖಂಡಿಸಿ ಬಿಜೆಪಿ ಸದಸ್ಯರು ಶುಕ್ರವಾರ ಕೂಡ ಕಲಾಪದಲ್ಲಿ ಭಾಗಿಯಾಗದೇ ರಾಜ್ಯ ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ.
ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಕೂಡ ಪ್ರತಿಭಟಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದರು.
ಬುಧವಾರದ ಸದನದಲ್ಲಿ ಬಿಜೆಪಿ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮುಖಕ್ಕೆ ಎಸೆದು, ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರು. ನಂತರ ಸಭಾಧ್ಯಕ್ಷ ಯು ಟಿ ಖಾದರ್ ಅವರು ಆ ಹತ್ತು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದರು.
ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ
ಶಾಸಕರ ಅಮಾನತು ವಿಚಾರವಾಗಿ ಕೇವಲ ವಿಧಾನಸೌಧದಲ್ಲಿ ಮಾತ್ರವಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲು ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶುಕ್ರವಾರ ಅಧಿವೇಶನ ಕೊನೆಯ ದಿನ
“21 ದಿನಗಳ ಕಾಲ ನಡೆದ ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ. ಅಧಿವೇಶನ ಆರಂಭದ ದಿನಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕೆಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿ ಉಂಟು ಮಾಡಿತ್ತು. ಇದೀಗ ಕೊನೆಯ ದಿನವೂ ಕಲಾಪ ಬಹಿಷ್ಕಾರ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.