ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಾಯಿ-ಮಕ್ಕಳ ಮರಣ ಪ್ರಮಾಣ ಹೆಚ್ಚಿದೆ. ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಿರುವುದರಿಂದ ಇದನ್ನು ಹೋಗಲಾಡಿಸಲು ಮತ್ತು ಪ್ರದೇಶದಲ್ಲಿ ಆರೋಗ್ಯ ಸುಧಾರಣೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಯಾದಗಿರಿ ನಗರದ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಆರೋಗ್ಯ ಆವಿಷ್ಕಾರ’ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ₹440.63 ಕೋಟಿ ವೆಚ್ಚದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಜಿಲ್ಲಾ ಬಂಜಾರ ಭವನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
‘ಈ ಭಾಗದಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಸೇವೆ ಕಡಿಮೆ. ದುಬಾರಿ ವೆಚ್ಚ ಮಾಡುವ ಶಕ್ತಿ ನಮ್ಮ ಬಡ ಜನರಿಗಿಲ್ಲ. ಹೀಗಾಗಿ ಈ ಎಲ್ಲಾ ಸೇವೆಗಳನ್ನು ಮುಂದಿನ ದಿನದಲ್ಲಿ ಪೂರೈಕೆಗೆ ಆರೋಗ್ಯ ಇಲಾಖೆ ಮುಂದಾಗಬೇಕು. ತಾಯಿ ಮಕ್ಕಳ ಮರಣ ಕಡಿಮೆಯಾಗಬೇಕು’ ಎಂದರು.’ಆರೋಗ್ಯ, ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಕಲ್ಯಾಣ ಪ್ರದೇಶವು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕೆಂಬುದು ನಮ್ಮ ಮಹಾದಾಸೆಯಾಗಿದೆ. ಈ ನಿಟ್ಟಿನಲ್ಲಿ ಪ್ರಸಕ್ತ 2025-26ನೇ ಸಾಲಿಗೆ ₹5,000 ಕೋಟಿ ಅನುದಾನ ಕೆಕೆಆರ್‌ಡಿಬಿ ಮಂಡಳಿಗೆ ನೀಡಿದ್ದು, ಅಷ್ಟು ಹಣ ಖರ್ಚು ಮಾಡಿ ಪ್ರದೇಶದ ಜನರ ಒಳಿತಿಗೆ ಶ್ರಮಿಸುವಂತೆ ಕೆಕೆಆರ್‌ಡಿಬಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರಿಗೆ ಸೂಚನೆ ನೀಡಿದ್ದೇನೆ’ ಎಂದರು.
‘ಡಾ.ಡಿ.ಎಂ.ನಂಜುಂಡಪ್ಪ ಅವರು ವರದಿ ನೀಡಿ ಎರಡು ದಶಕ ಕಳೆದಿರುವುದರಿಂದ ಹಿಂದುಳಿದ ಪ್ರದೇಶದಲ್ಲಿ ಇದುವರೆಗಿನ ಅಭಿವೃದ್ಧಿ ಆಧಾರದ ಮೇಲೆ ಹೊಸದಾಗಿ ಸೂಚ್ಯಂಕ ನಿಗದಿಪಡಿಸುವ ನಿಟ್ಟಿನಲ್ಲಿ ಆರ್ಥಿಕ ತಜ್ಞ ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಉನ್ನತ ಸಮಿತಿ ರಚಿಸಿದ್ದು, ಸಮಿತಿ ವರದಿಯಂತೆ ಮುಂದಿನ ದಿನದಲ್ಲಿ ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುವರಿಸಲಾಗುವುದು’ ಎಂದರು.

‘ಗ್ಯಾರಂಟಿ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡಿದ್ದರು. ಅದನ್ನು ಸುಳ್ಳಾಗಿಸಿ ಗ್ಯಾರಂಟಿ ಜೊತೆಗೆ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ, ರಸ್ತೆ, ಉದ್ಯೋಗ ಕಲ್ಪಿಸುವಂತಹ ಕೆಲಸಗಳನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ’ ಎಂದು ಹೇಳಿದರು.41 ಕಾಮಗಾರಿಗಳಿಗೆ ₹411.88 ಕೋಟಿ ವೆಚ್ಚ : ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ₹411.88 ಕೋಟಿ ವೆಚ್ಚದಲ್ಲಿ ಹೊಸದಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರ, 1 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 2 ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ, 6 ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ, 30 ಹಾಸಿಗೆಗಳಿಂದ 50 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವ 16 ಸಮುದಾಯ ಆರೋಗ್ಯ ಕೇಂದ್ರಗಳು, 1 ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವುದು, 100 ಹಾಸಿಗೆ ಸಾಮರ್ಥ್ಯದ 3 ತಾಲ್ಲೂಕು ಆಸ್ಪತ್ರೆ 150 ಹಾಸಿಗೆಗೆ ಮೇಲ್ದರ್ಜೆಗೇರಿಸುವ ಯೋಜನೆಗೆ ಚಾಲನೆ ದೊರೆತಿದೆ.
41 ಕಾಮಗಾರಿಗಳಿಗೆ ₹411.88 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದರಲ್ಲಿ ಕೆಕೆಆರ್‌ಡಿಬಿ ಮಂಡಳಿ ₹208.94 ಕೋಟಿ ಅನುದಾನ ನೀಡುವ ಮೂಲಕ ಪ್ರದೇಶದ ಅಭಿವೃದ್ಧಿಗೆ ಮುಂದಾಗಿದೆ.ಇದೇ ಸಂದರ್ಭದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರಾಗಿದ್ದ ದಿವಂಗತ ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಉಚಿತವಾಗಿ 2 ಎಕರೆ ಭೂಮಿ ಮಂಜೂರು ಮಾಡಿದ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ದಿ.ಕೊಲೂರು ಮಲ್ಲಪ್ಪ ಸ್ಮಾರಕ ಟ್ರಸ್ಟ್‌ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.ಮುಂದಿನ ಒಂದು ವರ್ಷದಲ್ಲಿ ಸ್ಮಾರಕ ನಿರ್ಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಸಿಎಂ ಸೂಚನೆ ನೀಡಿದರು.
ಇದನ್ನೂ ಓದಿ : ಸಮೂಹ ಸನ್ನಿಯ ಬಿತ್ತಿ ಹಣದ ಬೆಟ್ಟವನ್ನೇ ಬಾಚುತ್ತಿರುವ ಐಪಿಎಲ್; ಅಭಿಮಾನಿಗಳ ಕಣ್ಣಿಗೆ ಮಣ್ಣೆರಚುತ್ತಿದೆ!
ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಸಂಸದರಾದ ಜಿ.ಕುಮಾರ ನಾಯಕ, ರಾಧಾಕೃಷ್ಣ ದೊಡ್ಡಮನಿ, ರಾಜ್ಯ ಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಎಂ.ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ ನಾಯಕ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಭೀಮರಾವ ಬಿ.ಪಾಟೀಲ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವು ನಾಯಕರು, ಅಧಿಕಾರಿಗಳು ಭಾಗವಹಿಸಿದ್ದರು.
