ಕರ್ನಾಟಕದಲ್ಲಿ ಮಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ, ಸಾಧಾರಣಾ ಮಳೆಯಾಗುತ್ತಿದೆ. ಇನ್ನೂ, ನಾಲ್ಕೈದು ದಿನಗಳ ಕಾಲ ಇದೇ ರೀತಿ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.