ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.
ಗಂಗಾವತಿಯ ಮಹಾವೀರ ಸರ್ಕಲ್ ಬಳಿ 2021ರ ಮಾರ್ಚ್ 27ರಂದು ಅರ್ಬಾಜ್ ಖಾನ್, ಅರ್ಬಾಜ್ ಖಾಜಿ ಹಾಗೂ ಹುಸೇನ್ ರಜಾಕ್ ಶೇಖ್ ಎಂಬುವವರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದರು. ಈ ಕುರಿತು ಗಂಗಾವತಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಗರಠಾಣೆಯ ಪಿಎಸ್‌ಐ ವೆಂಕಟಸ್ವಾಮಿ ಟಿ ಈ ಪ್ರಕರಣದ ತನಿಖೆ ನಡೆಸಿದ್ದು, ತನಿಖೆಯಲ್ಲಿ ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗಂಗಾವತಿಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಸಾಕ್ಷಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದ್ದು, ಆರೋಪಿತರಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ₹1000 ದಂಡ ವಿಧಿಸಿದ್ದಾರೆ. ದಂಡ ಕೊಡದೇ ಇದ್ದಲ್ಲಿ ಹೆಚ್ಚುವರಿ 15 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು: ಪ್ರೊ. ಶಾಂತದೇವಿ
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಎಸ್ ವಾದ ಮಂಡಿಸಿದ್ದರು. ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ ನಾಯ್ಕ ಹಾಗೂ ವಿಶ್ವನಾಥ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಾಕಷ್ಟು ಸಹಕಾರ ನೀಡಿದ್ದಾರೆ ಎಂದು ಗಂಗಾವತಿ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.