- ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್
- ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಹುಲ್ ಮೇಲ್ಮನವಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಶುಕ್ರವಾರ (ಜು 21) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಪೂರ್ಣೇಶ್ ಮೋದಿ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿದ ಗುಜರಾತ್ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ ನೀಡಲು ನಿರಾಕರಿಸಿತ್ತು.
ರಾಹುಲ್ ಗಾಂಧಿ ಅವರು ಈ ಆದೇಶ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠ ವಿಚಾರಣೆ ನಡೆಸಿತು.
ರಾಹುಲ್ ಅವರ ಅರ್ಜಿಗೆ ಸಂಬಂಧಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಮತ್ತು ಗುಜರಾತ್ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
ರಾಹುಲ್ ಗಾಂಧಿ ಅವರ ಪರ ಹಾಜರಾದ ಹಿರಿಯ ವಕೀಲ ಎ ಎಂ ಸಿಂಘ್ವಿ ಮತ್ತು ವಕೀಲ ಪ್ರಸನ್ನ ಎಸ್, ಶಿಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಪೀಠದ ಅವಗಾಹನೆಗೆ ತಂದರು.
“ಈ ಹಂತದಲ್ಲಿ ಪ್ರತಿವಾದಿಗಳ ವಾದವನ್ನು ಆಲಿಸದೆ ನಾವು ಹೇಗೆ ತೀರ್ಪು ನೀಡಲು ಸಾಧ್ಯ?” ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ಪ್ರಶ್ನಿಸಿದರು.
ಪ್ರಕರಣದಲ್ಲಿ ಪ್ರತಿವಾದಿಗಳು ತಮ್ಮ ಹೇಳಿಕೆ ನೀಡಲು ನೋಟಿಸ್ ನೀಡಿ ಪೀಠ ವಿಚಾರಣೆ ಮುಂದೂಡಿತು.
2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಅವರು ಏಪ್ರಿಲ್ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, “ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ?” ಎಂದು ಪ್ರಶ್ನಿಸಿದ್ದರು.
ಈ ಸುದ್ದಿ ಓದಿದ್ದೀರಾ? ಕುರುವೈ ಬೆಳೆಗೆ ಕಾವೇರಿ ನೀರು: ಕರ್ನಾಟಕ ಮನವೊಲಿಸಲು ಕೇಂದ್ರಕ್ಕೆ ಎಂ ಕೆ ಸ್ಟಾಲಿನ್ ಪತ್ರ
ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶಿಸಿತ್ತು. ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಜುಲೈ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.