ಬಳ್ಳಾರಿಯ ಓಬಳಾಪುರಂ ಮೈನಿಂಗ್ ಕಂಪೆನಿ(ಓಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಜರ್ನಾದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಪುನರ್ ಸ್ಥಾಪಿಸಲಾಗಿದೆ.
ಜನಾರ್ದನ ರೆಡ್ಡಿಗೆ ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಲಾಗಿದೆ ಎಂದು ಗುರುವಾರ ಪ್ರಕಟಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಏಳು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿತ್ತು. ನಿಯಮದಂತೆ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದುಗೊಳಿಸಲಾಗಿತ್ತು.
ಆದರೆ, ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ರೆಡ್ಡಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ರೆಡ್ಡಿಯವರ ಅರ್ಜಿಯ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆ ನೀಡಿದೆ. ಅಲ್ಲದೆ, ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರಿಗೆ ಜಾಮೀನು ಮಂಜೂರು ಮಾಡಿದೆ. ಆ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದ್ದ ಜನಾರ್ದನ ರೆಡ್ಡಿಯ ಶಾಸಕ ಸ್ಥಾನ ಮುಂದುವರಿಸಲಾಗಿದೆ.