ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನಾ ವ್ಯಾಪ್ತಿಯ ಎಲ್ಲ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.
ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನಾ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್ ಮಾಡಲಾಗಿದೆ. ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ. ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7 ಪ್ಯಾಕೇಜ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರೇ ಹೇಳಿ- ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?
16 ಕಿಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6 ಎಕರೆ ಅರಣ್ಯ ಪ್ರದೇಶ ಹಾಗೂ 10 ಕಿಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಯೋಜನೆಯನ್ನು 2027ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ. ಕಳೆದ ಏಳು ವರ್ಷಗಳಲ್ಲಿ ಸರಾಸರಿ 18.08 ಟಿಎಂಸಿ ನೀರು ಯೋಜನೆಗೆ ಲಭ್ಯವಿದ್ದು, ಉಳಿದ 6 ಟಿಎಂಸಿ ನೀರಿನ ಕೊರತೆಯನ್ನು ನೀಗಿಸಲು ಹೆಚ್ಚುವರಿ ನೀರನ್ನು ತಿರುವುಗೊಳಿಸುವ ಕುರಿತು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಮಾಲೋಚಕರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ ಹೇಳಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೃಷ್ಣ ಭೈರೇಗೌಡ, ಡಾ.ಎಂ.ಸಿ. ಸುಧಾಕರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.