ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಸಾಮಾನ್ಯ ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಿನ್ನೆ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಗ್ಯಾರಂಟಿಗಳ ಮೂಲಕ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲ್ಷಕ್ಷ್ಮೀ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಿದಾಗ ಅನೇಕ ಟೀಕಾ-ಪ್ರಹಾರಗಳು ನಡೆದಿದ್ದವು. ಅವೆಲ್ಲವುಗಳನ್ನು ಮೆಟ್ಟಿನಿಂತು ರಾಜ್ಯ ಸರ್ಕಾರವು ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ. ಈ ವಸ್ತುಪ್ರದರ್ಶನವನ್ನು ಜೂ.26 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ” ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ ಇ ಚಿದಾನಂದಪ್ಪ ಮಾತನಾಡಿ, “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಸರ್ಕಾರವು ಮಾತು ಕೊಟ್ಟಂತೆ ನಡೆದುಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯಗಳೇ ಮುಖ್ಯವಾಗಿದ್ದು, ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನೇ ಜಾರಿಗೊಳಿಸಿದ್ದಾರೆ” ಎಂದರು.
“ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇ.97 ರಷ್ಟು ಪ್ರಗತಿಯಾಗಿದೆ. ಅದೇ ರೀತಿಯಾಗಿ ಬಳ್ಳಾರಿ ಜಿಲ್ಲೆಯಲ್ಲಿ ಶೇ.97.05 ರಷ್ಟು ಫಲಾಭವಿಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ತಲುಪಿಸಿದ್ದೇವೆ. ಈವರೆಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದೇ ವಂಚಿತರಾಗಿದ್ದಲ್ಲಿ, ನಗರದ ಜಿಲ್ಲಾ ಪಂಚಾಯತ್‌ನಲ್ಲಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಭೇಟಿ ನೀಡಬಹುದು” ಎಂದು ತಿಳಿಸಿದರು.
ಇದನ್ನೂ ಓದಿ: ಬಳ್ಳಾರಿ | ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್ ಎನ್ ಮಾತನಾಡಿ, “ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಎರಡು ವರ್ಷ ಪೂರೈಸಿರುವ ಹಿನ್ನಲ್ಲೆಯಲ್ಲಿ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಮಾಹಿತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪುವುದರ ಜೊತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ” ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್, ವಿಭಾಗೀಯ ಸಂಚಾರಾಧಿಕಾರಿ ಚಾಮರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮಂತಪ್ಪ, ಮಲ್ಲೇಶಪ್ಪ, ಹನುಮೇಶ್ ಹೆಚ್, ತೇಜ, ದಿವಾಕರ, ಶ್ರೀಧರ್ ಕಾವಲಿ, ರುದ್ರಮುನಿ ಸ್ವಾಮಿ ಸೇರಿದಂತೆ ಇತರರು ಇದ್ದರು.