ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಜು.25ರಂದು ರಜೆ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25 ರ ಮಂಗಳವಾರದಂದು ರಜೆಯನ್ನು ಘೋಷಿಸಿ, ಆದೇಶ ಹೊರಡಿಸಿದ್ದಾರೆ.
ರೆಡ್ ಅಲರ್ಟ್ ಘೋಷಣೆ
ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ.
ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.