ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸಹೋದರರು ಮತ್ತು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ಬೆಳಗಾವಿ ಜಿಲ್ಲೆಯ ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಬೆಮುಲ್) ಅಧ್ಯಕ್ಷರಾಗಿರುವ ಅವರು, “ನಾನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ. ನಿರ್ದೇಶಕರಾಗಿ ಮಾತ್ರ ಕಾರ್ಯನಿರ್ವಹಿಸುತ್ತೇನೆ. ನಾನು ಸುರೇಶ್ ಅವರ ಎದುರಾಳಿ ಎಂಬಂತೆ ಬಿಂಬಿಸುವುದು ಸರಿಯಲ್ಲ,” ಎಂದು ಸ್ಪಷ್ಟಪಡಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿದೆಯೋ, ಆ ಪಕ್ಷದ ಪ್ರತಿನಿಧಿಗೆ ಇಂತಹ ಸಂಸ್ಥೆಗಳಾದ ಕೆಎಂಎಫ್, ಅಪೆಕ್ಸ್ ಬ್ಯಾಂಕ್, ಮಾರ್ಕೆಟಿಂಗ್ ಫೆಡರೇಷನ್‌ಗಳ ಅಧ್ಯಕ್ಷ ಸ್ಥಾನಗಳು ಸಹಜವಾಗಿ ಲಭಿಸುತ್ತವೆ,” ಎಂದು ಹೇಳಿದರು.