ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ತೀರ್ಪು ನೀಡಿದೆ.
ಯಮುನೇಶ (28) ಶಿಕ್ಷೆಗೆ ಒಳಗಾದ ಆರೋಪಿ.15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ ಎಸಗಿದ್ದಕ್ಕೆ ಸಂಬಂಧಿಸಿದಂತೆ 2022ರ ಫೆ.10ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಮಂಗಳವಾರ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ
ಸಂತ್ರಸ್ತ ಬಾಲಕಿಗೆ ದಂಡದ ಮೊತ್ತ ಹಾಗೂ ₹ 5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. 9ನೇ ತರಗತಿ ಓದುತ್ತಿದ್ದ ಬಾಲಕಿ ನಾಪತ್ತೆಯಾಗಿರುವ ಕುರಿತು ಪಾಲಕರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಆರ್. ಚೌಬೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.