ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ಕಳವಳ ವ್ಯಕ್ತ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿ. ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.