ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು, ಹೊಳೆನರಸೀಪುರ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಗುರುವಾರ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು ಹಾಗೂ ಹೊಳೆನರಸೀಪುರ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಮುಂಜಾಗ್ರತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಸಕಲೇಶಪುರ ತಾಲೂಕಿನಾದ್ಯಂತ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳ ಜೊತೆಗೆ ಕಾಲೇಜುಗಳಿಗೂ ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದನ್ನೂ ಓದಿದ್ದೀರಾ? ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು
ಹೇಮಾವತಿ ಜಲಾಶಯದ ನೀರಿನ ಮಟ್ಟ
ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಇದ್ದು, ಸದ್ಯ ಜಲಾಶಯದಲ್ಲಿ 31.112 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2915.50 ಅಡಿಗಳಷ್ಟಿದೆ. ಸದ್ಯ ಜಲಾಶಯದ ಒಳಹರಿವು 14985 ಕ್ಯೂಸೆಕ್ ಹಾಗೂ ಹೊರಹರಿವು 15,700 ಕ್ಯೂಸೆಕ್ ಇದೆ.