ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ರೈತರು ಮತ್ತು ದೇವಾಲಯಗಳ ಆಸ್ತಿಯನ್ನು ವಕ್ಫ್ ಮಂಡಳಿ ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿ 2024ರ ನವೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆಗಳನ್ನು ನಡೆಸಿತ್ತು. ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಬೊಮ್ಮಾಯಿ, “ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ” ಎಂದು ಆರೋಪಿಸಿದ್ದರು. ಮಾತ್ರವಲ್ಲದೆ, ವಕ್ಫ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.
ಅವರ ಭಾಷಣವು ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುತ್ತದೆ ಎಂದು ಆರೋಪಿಸಲಾಗಿತ್ತು. ಬೊಮ್ಮಾಯಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 196(1)(ಎ) ಅಡಿಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ಮತ್ತು ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ರದ್ದು ಕೋರಿ, ಬೊಮ್ಮಾಯಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ಭಾಷಣದಲ್ಲಿ ಸೆಕ್ಷನ್ 196(1)(ಎ) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು ಅಗತ್ಯವಾದ ಪ್ರಚೋದನಕಾರಿ ಅಂಶಗಳು ಇಲ್ಲ ಎಂದು ವಾದಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರು ಬೊಮ್ಮಾಯಿ ವಿರುದ್ದದ ಎರಡೂ ಪ್ರಕರಣಗಳನ್ನು ರದ್ದುಗೊಳಿಸಿದ್ದಾರೆ.