1983ರಿಂದ ಶಾಸಕನಾಗಿದ್ದೀನಿ, ಇಂತಹ ಕಾಲ್ತುಳಿತ ಪ್ರಕರಣ ನಾನು ನೋಡಿರಲಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

“ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸುವಂತೆ ಸೂಚಿಸಿದರು. ಈ ವೇಳೆ ಕಾಲ್ತುಳಿತ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾತನಾಡಿದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ‘ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ವಿಡಿಯೋ ಒದಗಿಸಿ’ ಎಂದ ಹೈಕೋರ್ಟ್‌

Advertisements

“ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3:50ಕ್ಕೆ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವೇ? 5:45ಕ್ಕೆ ನಾನಾಗಿ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು” ಎಂದು ಹೇಳಿದರು.

“ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು. ಹಿರಿಯ ಅಧಿಕಾರಿಗಳ ಅಮಾನತು ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ. ಆದರೆ ತಪ್ಪಾಗಿದ್ದು ನಿಜ ತಾನೇ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಾಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂತಹದನ್ನು ಸಹಿಸಲು ಸಾಧ್ಯವಿಲ್ಲ” ಎಂದರು.

“ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿ. ಆದರೆ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದೆ. ಅದನ್ನು ಹೆಚ್ಚಿಸಬೇಕು. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿದೆ” ಎಂದು ಅಭಿಪ್ರಾಯಿಸಿದರು. ಈ ವೇಳೆ ಬೀದರ್‌ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

“ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ತೇವೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ‌ ಒದಗಿಸುವುದು ಪೊಲೀಸ್ ಜವಬ್ದಾರಿ. ಕಾನೂನು ಎಲ್ಲರಿಗೂ ಒಂದೇ” ಎಂದರು.

“ನಾವು ಪ್ರಜಾಪ್ರಭುತ್ವ ಒಪ್ಪಿದ್ದೀವಿ. ಸಂವಿಧಾನ ಒಪ್ಪಿಕೊಂಡಿದ್ದೇವೆ. ಸಮಾಜದ ಸ್ವಾಸ್ಥ್ಯ ಕಾಪಾಡಿ, ಸಮಾಜದ ಎಲ್ಲರಿಗೂ ನ್ಯಾಯ ಕೊಡಿಸುವ ಭರವಸೆ ನೀಡಿದ್ದೀವಿ. ಇದಕ್ಕೆ ತಕ್ಕಂತೆ ನಡೆದುಕೊಳ್ಳಿ. ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ. ಜನರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ” ಎಂದು ಹೇಳಿದರು.

ಕೋಮು ಘರ್ಷಣೆ ದಕ್ಷಿಣ ಕನ್ನಡದಲ್ಲೇ ಹೆಚ್ಚಾಗಿರುವುದೇಕೆ: ಸಿಎಂ ಪ್ರಶ್ನೆ

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

“ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ” ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, “ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ” ಎಂದು ಸ್ಪಷ್ಟ ಸೂಚನೆ ನೀಡಿದರು.

“ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲೇ, “ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು 2 ತಿಂಗಳ‌ ಬಳಿಕ ನೇಮಕಾತಿ‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು” ಎಂದು ತಿಳಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಎಂ ಸಲೀಂ ಅವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X