- ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣ
- ‘ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ‘
ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಬುಧವಾರ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
“ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಪ್ರವಾಹದ ಮುನ್ಸೂಚನೆ ಬಂದ ಕೂಡಲೇ ಸ್ಥಳಾಂತರಕ್ಕೆ ಕ್ರಮ ವಹಿಸಿ. ಹಿಂದಿನ ಸರ್ಕಾರದ ವತಿಯಿಂದ ಪರ್ಯಾಯವಾಗಿ ಕಟ್ಟಲಾಗಿರುವ ಮನೆಗಳು ಯಾರೂ ವಾಸ ಮಾಡಲು ಕೂಡ ಯೋಗ್ಯವಲ್ಲ ಎನ್ನುವ ದೂರುಗಳು ಜನರಿಂದ ವ್ಯಾಪಕವಾಗಿ ಬರುತ್ತಿವೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆಗೆ ಹೆಚ್ಚು ಒತ್ತು ನೀಡಿ” ಎಂದು ಎಚ್ಚರಿಕೆ ನೀಡಿದರು.
ಅನಾಹುತಗಳನ್ನು ತಪ್ಪಿಸಲು ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಪದೇ ಪದೇ ಪ್ರವಾಹವಾಗುವ ಸ್ಥಳಗಳಲ್ಲಿ ಜನರಿಗೆ ಮನವರಿಕೆ ಮಾಡಿ ಸ್ಥಳಾಂತರ ಮಾಡಿ ಜೀವಹಾನಿ ತಪ್ಪಿಸಬೇಕು. ನೆರೆ ಬಂದು ನೀರು ಹೆಚ್ಚಾದರೆ ಅದರ ಬಳಿ ಜನರು ಹೋಗದಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕು. ಅರಿವು ಮೂಡಿಸುವ ಕೆಲಸ ಮಾಡಿ ಪ್ರಾಣಹಾನಿ ತಪ್ಪಿಸಬೇಕು” ಎಂದು ಸೂಚಿಸಿದರು.
ಭೂ ಕುಸಿತ ಸಾಧ್ಯತೆ ಮೊದಲೇ ಗೊತ್ತಿರುತ್ತದೆ
“ಭೂ ಕುಸಿತ ಆಗಬಹುದಾದ ಸ್ಥಳಗಳ ಬಗ್ಗೆ ಒಂದು ಹಂತಕ್ಕೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ಇರುತ್ತದೆ. ಪೊಲೀಸ್, ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮಧ್ಯೆ ಸಮನ್ವಯವಿದ್ದರೆ ಸಾಕಷ್ಟು ಜೀವಹಾನಿ ತಪ್ಪಿಸಬಹುದು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಕಾಳಜಿಯಿಂದ ವರ್ತಿಸಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವೈದ್ಯಕೀಯ ಉದ್ದೇಶಕ್ಕೆ ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಣೆಗೆ ಚಿಂತನೆ: ಸಚಿವ ಕೆ ಎಚ್ ಮುನಿಯಪ್ಪ
ತಪ್ಪಿದ ಅನಾಹುತ
“ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು ತೆಗೆಯಲಾಗಿತ್ತು. ಇದರಿಂದ ಸಾಕಷ್ಟು ಅನಾಹುತಗಳನ್ನು ತಪ್ಪಿಸಿದ್ದೇವೆ. ಆದರೆ ಕೈ ಸಂಕದಿಂದ ಹಾಗೂ ಇತರೆ ಮಳೆ ಅಪಘಾತಗಳಿಂದ 9 ಸಾವು ಸಂಭವಿಸಿದೆ” ಎಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
“ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣಹೊಂದಿದ್ದಾರೆ. ಇವರಿಗೆ ತುರ್ತಾಗಿ ಪರಿಹಾರ ಒದಗಿಸಲಾಗಿದೆ. ಆದರೆ ಜಿಲ್ಲಾಡಳಿತ ಅಲರ್ಟ್ ಆಗಿದ್ದರೆ ಈ ಅನಾಹುತಗಳಲ್ಲಿ ಸಾಕಷ್ಟನ್ನು ತಪ್ಪಿಸಬಹುದಿತ್ತಲ್ಲವೇ” ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಉದಾಸೀನ ಸಹಿಸಲ್ಲ
“ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆಗಳ ಕಟ್ಟಡ ಶಿಥಿಲ ಆಗಿವೆ ಎನ್ನುವ ಮಾಹಿತಿ ಮೊದಲೇ ಗೊತ್ತಿರುತ್ತದೆ. ದುರಸ್ತಿ, ಸ್ಥಳಾಂತರ, ರಿಪೇರಿಗೆ ಸಾಕಷ್ಟು ಹಣ ಮೀಸಲಿಟ್ಟಿದ್ದರೂ ಈ ಬಗ್ಗೆ ಮೊದಲೇ ಕ್ರಮ ಏಕೆ ಕೈಗೊಳ್ಳುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂತಹ ಉದಾಸೀನ ಮತ್ತು ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವೇ ಇಲ್ಲ” ಎಂದು ಎಚ್ಚರಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಪ್ರಿಯಾಂಕ ಖರ್ಗೆ, ಈಶ್ವರ್ ಖಂಡ್ರೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.