ತೆಲುಗಿನ ಹಲವು ಸುದ್ದಿ ಮಾಧ್ಯಮಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ವೇಚ್ಛಾ ವೋತಾರ್ಕರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
35 ವರ್ಷದ ಶ್ವೇಚ್ಛಾ ಅವರು ಪ್ರಸ್ತುತ ‘ಟಿ ನ್ಯೂಸ್’ ಮಾಧ್ಯಮ ಸಂಸ್ಥೆಯಲ್ಲ ನಿರೂಪಕಿಯಾಗಿದ್ದರು. ಅವರು ಹೈದರಾಬಾದ್ನ ರಾಮ್ ನಗರದಲ್ಲಿ ತಮ್ಮ ತಾಯಿಯೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈವರೆಗೆ, ಅವರ ಸಾವಿಗೆ ಕಾಣವೇನು ಎಂಬುದು ಗೊತ್ತಾಗಿಲ್ಲ.
ಆದಾಗ್ಯೂ, ಆತ್ಮಹತ್ಯೆಗೆ ಶರಣಾಗುವ ಕೆಲವು ಗಂಟೆಗಳ ಮುನ್ನ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ತಮ್ಮ ಫೋಟೋ ಜೊತೆಗೆ, ‘ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ. ಅವರು ಮಾನಸಿಕವಾಗಿ ನೊಂದಿದ್ದರು ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ.
ಅವರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣವಿರಬಹುದು ಎಂದು ಊಹಿಸಲಾಗಿದೆ. ಇದನ್ನು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.