ರಾಜ್ಯದಾದ್ಯಂತ ಭದ್ರತಾ ದೃಷ್ಟಿಯಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ವ್ಯವಸ್ಥೆ ಇನ್ನುಳಿದ ನಿಲ್ದಾಣಗಳಲ್ಲಿಯೂ ಅಳವಡಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.
ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಿದರೂ ಸಭೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ, “ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಲ್ಲ. ಆದ್ದರಿಂದ ಅವರಿಗೆ ಸಭೆಗೆ ಆಹ್ವಾನ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.