ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಗುಕೊಂಡಿದೆ. ಗುರುವಾರದಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನೂ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಕಿ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ನಲ್ಲಿ ಕಳೆದ 24 ಗಂಟೆಯಲ್ಲಿ 270 ಮಿ.ಮೀ. ದಾಖಲೆಯ ಮಳೆಯಾಗಿದೆ. ಜಿಲ್ಲೆಯಲ್ಲಿರುವ ಲಿಂಗನಮಕ್ಕಿ ಜಲಾಶಯಕ್ಕೆ 45,070 ಕ್ಯೂಸೆಕ್ ನೀರಿನ ಒಳ ಹರಿವಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿಗಳಿದ್ದು, ಈಗಾಗಲೇ 1787.80 ಅಡಿಗಳಷ್ಟು ನೀರು ತುಂಬಿದೆ. ಕೆಲವೇ ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಹೇಳಲಾಗಿದೆ.
ಇನ್ನು, ತುಂಗಭದ್ರ ನದಿ ಕೂಡ ತುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ ವ್ಯಾಪ್ತಿಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹರಿಹರದ ಹರಿಹರೇಶ್ವರ ದೇವಸ್ಥಾನ ಬಳಿಯ ಗೋಪುರ ಜಲಾವೃತವಾಗಿದೆ.
ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಎರಡೂ ಜಿಲ್ಲೆಯ ಎಲ್ಲ ಶಾಲೆಗಳು, ಅಂಗನವಾಡಿಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂತೆಯೇ, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಸಾಗರ ಮತ್ತು ಹೊಸನಗರ ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.