ರಾಜ್ಯದಲ್ಲಿ ಸದ್ಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿಗೆ ಎಂದು ಮಾಜಿ ಸಚಿವ ಬಿ.ಸಿ ನಾಗೇಶ್ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಉಡುಪಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹಾಗಾಗಿ ಕಾಂಗ್ರೆಸ್‌ನವರು ಈ ಪ್ರಕರಣ ಮುಚ್ಚಿ ಹಾಕಲು ಶತಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.
ಇಷ್ಟೆಲ್ಲ ಘಟನೆ ನಡೆದಿದ್ದರೂ ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? ಕೋಟಿಗಾನಹಳ್ಳಿ ರಾಮಯ್ಯ ಸೇರಿ ಆರು ಮಂದಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ
‘ಪೊಲೀಸರು ಉಗ್ರಗಾಮಿ ರೀತಿ ವಶಕ್ಕೆ ಪಡೆದಿದ್ದರು‘
ಉಡುಪಿ ವಿಡಿಯೋ ಪ್ರಕರಣ ಸಂಬಂಧ ಟ್ವೀಟ್ ಮಾಡಿದ್ದ ಆರೋಪದಡಿ ನಿನ್ನೆಯಷ್ಟೇ ಬಿಜೆಪಿ ಕಾರ್ಯಕರ್ತೆ ಶಕುಂತಲ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದರು. ಈ ವಿಚಾರ ಕುರಿತಂತೆ ಮಾತನಾಡಿದ ಬಿ ಸಿ ನಾಗೇಶ್, ಉಡುಪಿ ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತೆ ಶಕುಂತಲ ಟ್ವೀಟ್ ಮಾಡಿದ್ದರು. ಆಕೆಯನ್ನು ಪೊಲೀಸರು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ಈ ಎಲ್ಲ ಘಟನೆಗಳನ್ನು ನೋಡುತ್ತಿದ್ದರೆ, ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.