ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
“ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಜುಲೈ 12ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ” ಎಂದು ಆಯೋಗವು ಪತ್ರದಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡವೇಕೆ ಮಂಗಳೂರು ಆಗಬೇಕು; ಏನಿದು ಮರುನಾಮಕರಣ ಕೂಗು?
“ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ” ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ನಿಟ್ಟಿನಲ್ಲಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಹಿಳಾ ಆಯೋಗ ಮನವಿ ಮಾಡಿದೆ.
