ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ ಘಟನೆ ನಡೆದಿದೆ.
ಸಾರ್ವಜನಿಕ ಆಸ್ಪತ್ರೆಗೆ ಸಂಪರ್ಕ ವಿದ್ಯುತ್ ಕಲ್ಪಿಸುವ 450 ಕೆ.ವಿ ವಿದ್ಯುತ್ ಪರಿವರ್ತಕದಲ್ಲಿ ಸಮಸ್ಯೆ ಉಂಟಾಗಿದ್ದ ಕಾರಣ ಹಾಗೂ ಜನರೇಟರ್ ಕಾರ್ಯನಿರ್ವಹಿಸದ ಹಿನ್ನೆಲೆ ಆಸ್ಪತ್ರೆಗೆ ಡಯಾಲಿಸಿಸ್ ಗೆ ದಾಖಲಾಗಿದ್ದ ರೋಗಿಗಳಿಗೆ ವಿದ್ಯುತ್ ಸಮಸ್ಯೆ ಕಾರಣದಿಂದ ಡಯಾಲಿಸಿಸ್ ಯಂತ್ರಗಳು ಹಾಗೂ ಆಕ್ಸಿಜನ್ ಯಂತ್ರಗಳು ಕಾರ್ಯನಿರ್ವಹಿಸಿಲ್ಲ. ಹೀಗಾಗಿ
ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಗೆ ದಾಖಲಾಗಿದ್ದ ಒರ್ವ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಹಾಗೂ ರೋಗಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಬಳಿಕ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಧ್ಯಾಹ್ನದ ವೇಳೆಗೆ ಪರಿವರ್ತಕದ ಸಮಸ್ಯೆ ಸರಿಪಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಶೌಚಾಲಯ ಸಮರ್ಪಕ ನಿರ್ವಹಣೆ ಇಲ್ಲದೆ ರೋಗಿಗಳು ಮೂಗು ಮುಚ್ಚಿಕೊಂಡು ಒಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಶಾಸಕರು ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಗಮನ ಹರಿಸಬೇಕೆಂದು ಸಾರ್ವಜನಿಕರ ಆಗ್ರಹಿಸಿದ್ದಾರೆ.