ಮೂವರು ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ, ಅಮಾನುಷ ಘಟನೆ ಉತ್ತರ ಪ್ರದೇಶದ ಬುಲಂದರ್‌ಶಾ ಜಿಲ್ಲೆಯಲ್ಲಿ ನಡೆದಿದೆ.
ಅತ್ಯಾಚಾರ ಎಸಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳು 13 ರಿಂದ 17 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಕೃತ್ಯವು ಜೂನ್ 28ರಂದು ನಡೆದಿದೆ. ಆರೋಪಿಗಳು ಸಂತ್ರಸ್ತೆ ಬಾಲಕಿಯನ್ನು ಮತ್ತು ಆಕೆಯ ಎಳೆ ವಯಸ್ಸಿನ ತಮ್ಮನನ್ನು ಬೈಕ್ ಸವಾರಿಗಾಗಿ ಕರೆದೊಯ್ದಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ
ಮನೆಗೆ ಮರಳಿದ ಸಂತ್ರಸ್ತೆ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಬಳಿಕ, ಸಂತ್ರಸ್ತೆಯ ತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 70(2) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 5/6 ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ, ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. “ಅತ್ಯಾಚಾರದ ಬಳಿಕ ಆಘಾತಕ್ಕೆ ಒಳಗಾಗಿದ್ದ ಬಾಲಕಿ ಹಲವು ದಿನಗಳಿಂದ ಮೌನವಾಗಿದ್ದಳು. ಆಕೆ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದಳು” ಎಂದು ಸಂಬಂಧಿಗಳು ತಿಳಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.