ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಹಲವಾರು ಅತ್ಯಾಚಾರ, ಕೊಲೆ ಹಾಗೂ ಗೌಪ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಬೇಕು. ಪ್ರಕರಣದ ಪ್ರಮುಖ ಸಾಕ್ಷಿ-ಫಿರ್ಯಾದಿಗೆ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅನಾಮಧೇಯ ಪ್ರಮುಖ ಸಾಕ್ಷಿಯು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಆದಾಗ್ಯೂ, ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಪೇಪರ್ ಮೇಲೆ ಗುರುತು ಮಾಡಿಕೊಡುವಂತೆ ಸಾಕ್ಷಿ ಫಿರ್ಯಾದಿ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಆತನ ಹೇಳಿಕೆಗಳನ್ನು ಸೋರಿಕೆ ಮಾಡಲಾಗುತ್ತಿದೆ. ಇದೆಲ್ಲವನ್ನೂ ಸರ್ಕಾರ ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?
“ಆತನ ಹೇಳಿಕೆ ದಾಖಲಿಸಿಕೊಂಡಿರುವ ತನಿಖಾಧಿಕಾರಿಯು ಯಾರಿಗೋ ಕರೆ ಮಾಡಿ, ಅವರು ಸೂಚಿಸಿದ್ದಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆದ್ದರಿಂದ, ತಕ್ಷಣವೇ ತನಿಖಾ ತಂಡವನ್ನು ಬದಲಿಸಬೇಕು. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ರಚಿಸಬೇಕು. ಸಾಕ್ಷಿ ಫಿರ್ಯಾದುದಾರ ಮತ್ತು ಆತನ ವಕೀಲರಿಗೆ ಬೆದರಿಕೆ ಇದ್ದು, ಇಬ್ಬರೂ ತಕ್ಷಣವೇ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್, ”ಬಿಎನ್ಎಸ್ 183ನೇ ಸೆಕ್ಷನ್ ಅಡಿಯಲ್ಲಿ ಸಾಕ್ಷಿ ಫಿರ್ಯಾದಿ ನೀಡಿದ ಹೇಳಿಕೆ ಸಾಕ್ಷ್ಯವಾಗುತ್ತದೆ. ಈ ಹೇಳಿಕೆಗಳು ಖಾಸಗಿ ವ್ಯಕ್ತಿಗಳಿಗೆ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಿ ಎಂದು ವಕೀಲರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವಕೀಲರಾದ ಬಾಲನ್, ಉಮಾಪತಿ, ಸುಧಾ ಕಟ್ವಾ, ನರಸಿಂಹಮೂರ್ತಿ ಉಪಸ್ಥಿತರಿದ್ದರು.