ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಬಸವ ನಗರ ಬಡಾವಣೆಯ ಶಶಿಕಾಂತ ಎಸ್.ಎಲ್.ಪಾಟೀಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 27.55 ಲಕ್ಷ ಅನುದಾನದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ʼಮಕ್ಕಳ ಕಲಿಕೆಗೆ ಬೇಕಿರುವ ಉತ್ತಮ ಶಾಲಾ ಕಟ್ಟಡಗಳು, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಎಲ್ಲ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳಿಗೆ ಹೊಲಿಸಿದರೇ ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟ ಕುಸಿಯುತ್ತಿದೆʼ ಎಂದು ಆತಂಕ ವ್ಯಕ್ತಪಡಿಸಿದರು.
ಮಕ್ಕಳ ಕಲಿಕೆಗೆ ಪೂರಕವಾಗಿ ಹೊಸದಾಗಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿಕೊಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ : ಸೌಜನ್ಯ ಹತ್ಯೆ & ನಿಗೂಢ ಸಾವುಗಳ ನ್ಯಾಯಕ್ಕಾಗಿ ಒತ್ತಾಯಿಸಿ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನ
ಲೋಕೋಪಯೋಗಿ ಇಲಾಖೆಯ ಎಇಇ ಅಲ್ತಾಫ್, ಪ್ರಭಾರಿ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ, ಕಚೇರಿ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಜಕುಮಾರ ಬಿರಾದಾರ್, ಮುಖ್ಯಗುರು ರಾಜಶೇಖರ, ಶಿಕ್ಷಣ ಹಣಮಶೆಟ್ಟಿ ಸೇರಿದಂತೆ ಹಲವರು ಇದ್ದರು.