ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಅವರು ಮಾತನಾಡಿದರು.
“ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ ₹500 ಕೋಟಿ ಮೀಸಲಿಡಲಾಗುತ್ತಿದೆ ಎಂದರು. ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ಒದಗಿಸಲಾಗುವುದು. ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿನ 136ಕ್ಕೂ ಹೆಚ್ಚು ಮಳೆಮಾಪನ ಯಂತ್ರಗಳು ಹಾಳಾಗಿದೆ. ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.

“ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದೆ. ಜನರಿಗೆ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ 6 ತಿಂಗಳ ಒಳಗೆ ರಾಜ್ಯದ ಎಲ್ಲ ಕಂದಾಯ ದಾಖಲೆಗಳನ್ನು ಸಂಪೂರ್ಣ ಗಣಕೀಕರಣ ಮಾಡುವ ಗುರಿ ಹೊಂದಲಾಗಿದೆ ಎಂದ ಅವರು ರಾಜ್ಯದಲ್ಲಿ ಪೌತಿ ಖಾತೆ ಆಂದೋಲನ ನಡೆಸಲಾಗುತ್ತಿದ್ದು ಮೃತರ ಅಧಿಕೃತ ವಾರಿಸುದಾರರಿಗೆ ಪಹಣಿ ದಾಖಲೆಗಳನ್ನು ವರ್ಗಾವಣೆ ಮಾಡಲಾಗುವುದು” ಎಂದರು.
ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು
ಶಿರಸಿ ತಾಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್.ಎನ್.ಎಸ್ ಇನ್‌ಫ್ರಾಸ್ಟ್ರಕ್ಟರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಮತ್ತಿತರರು ಉಪಸ್ಥಿತರಿದ್ದರು.