ಸರ್ಕಾರ ಹಲವು ಇಲಾಖೆಗಳ ಮೂಲಕ ಸಾಕಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಪ್ರಚಾರದ ಕೆಲಸವು ಅಷ್ಟೇ ಪ್ರಮುಖವಾದದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ದಾವಣಗೆರೆ ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳಿಂದ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳು ಮತ್ತು ಪ್ರಾಧಿಕಾರದಿಂದ ಮುಂದಿನ ಎರಡು ತಿಂಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮ ರೂಪುರೇಷೆಗಳ ಕುರಿತ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
“ಯೋಜನೆಗಳ ಹೆಸರು, ಅರ್ಹತೆ, ಸೌಲಭ್ಯಗಳು, ಪಡೆಯುವ ಮಾನದಂಡಗಳೇನು ಎನ್ನುವ ಬಗ್ಗೆ ಕೈಪಿಡಿಯಲ್ಲಿ ಮಾಹಿತಿ ಇರಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿವೇತನ, ಎಸ್‌ಎಸ್‌ಎಲ್‌ಸಿಯಿಂದ ಉನ್ನತ ಶಿಕ್ಷಣದವರೆಗೆ ಪ್ರೋತ್ಸಾಹಧನ, ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಬಹುತೇಕ ಕಾರ್ಯಕ್ರಮಗಳಿವೆ. ಕಾರ್ಮಿಕ ಇಲಾಖೆಯಲ್ಲಿಯೂ ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವುದು ಮುಖ್ಯವಾಗಿದೆ” ಎಂದರು.
“ಸಮಾಜ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಮನರೇಗಾ, ಎನ್‌ಆರ್‌ಎಲ್‌ಎಂ, ಕಾರ್ಮಿಕ ಇಲಾಖೆ, ಬಿಸಿಎಂ, ಸಾಮಾಜಿಕ ಭದ್ರತಾ ಯೋಜನೆಗಳು ಸೇರಿದಂತೆ ಹಲವು ಇಲಾಖೆಗಳಿಂದ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಆದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಗಳು ಸಿಗಬೇಕೆನ್ನುವುದು ಕಾನೂನು ಸೇವಾ ಪ್ರಾಧಿಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರ ಪರಿಶೀಲನೆ ನಡೆಸಲಿದೆ” ಎಂದರು.
“ಸರ್ಕಾರ ಸಮಾಜದ ಸುಧಾರಣೆಗಾಗಿ ಸಾಕಷ್ಟು ಕಾನೂನುಗಳನ್ನು ಜಾರಿಗೆ ತಂದಿದ್ದರೂ ಅವುಗಳ ಸಮರ್ಪಕ ಅನುಷ್ಠಾನವಾಗದೇ ಪ್ರಸ್ತುತ ಯುವಜನರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಗಟ್ಟಲು ಕಾಯಿದೆ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕಾಗಿದೆ. ಶಾಲಾ-ಕಾಲೇಜುಗಳ ಹಂತದಲ್ಲಿಯೇ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳಿಂದ ಕಾರ್ಯಕ್ರಮ ರೂಪಿಸುವ ಮೂಲಕ ಮುಂದಿನ ಸತ್ಪ್ರಜೆಗಳನ್ನಾಗಿ ಮಾಡಲು ಮತ್ತು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕು” ಎಂದು ಅಭಿಪ್ರಾಯಪಟ್ಟರು.
“ದಾವಣಗೆರೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 9ರಂದು ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಕಾನೂನು ಸೇವಾ ಮತ್ತು ಅರಿವು ಕಾರ್ಯಕ್ರಮಗಳನ್ನು ಉದ್ದೇಶಿಸಲಾಗಿದೆ. ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ, ಮಾದಕ ವಸ್ತುಗಳಿಂದ ಯುವಜನರನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ” ಎಂದರು.
ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ಮಹಾವೀರ ಮ.ಕರಣ್ಣವರ ಅವರು ವಿವಿಧ ಇಲಾಖೆಗಳಲ್ಲಿ ರೂಪಿಸಲಾದ ಕ್ರಿಯಾ ಯೋಜನೆಗಳ ಮಾಹಿತಿ ಮತ್ತು ಅನುಷ್ಠಾನ ಮಾನದಂಡಗಳ ಬಗ್ಗೆ ಮಾಹಿತಿ ಪಡೆದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಶಿವಪ್ಪ ಸಲಗೇರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ಅಭಿಯೋಜಕ ಇಲಾಖೆ ಉಪನಿರ್ದೇಶಕಿ ಕಲ್ಪನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾ, ಸಮಾಜ ಉಪನಿರ್ದೇಶಕ ಇಲಾಖೆ ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಜಿಲ್ಲಾ ಸರ್ಕಾರಿ ವಕೀಲರಾದ ನವೀನ್, ಚಿಗಟೇರಿ ಆಸ್ಪತ್ರೆ ಸರ್ಜನ್ ಡಾ ಸುಭಾಷ್, ಸಮಿತಿ ಸದಸ್ಯೆ ರೂಪಾನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.