ಕ್ಯಾನ್ಸರ್ ರೋಗಿಗಳ ಆರೈಕೆ ಹಾಗೂ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಸಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ರೂ.1.49 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದರು.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ
ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ, ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2025-26ರ ಕೇಂದ್ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದೆ. ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ ರೂ. 1.49 ಕೋಟಿ ವರೆಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸೆಂಟರ್ ದಕ್ಷಿಣ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ನೂರಾರು ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ತಿಳಿಸಿದರು.
