ಶಿವಮೊಗ್ಗ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಮಂಗಳವಾರ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ಡಿ.ಎ.ಆರ್.ಮೈದಾನದಲ್ಲಿ ಆಚರಿಸಲಾಗುತ್ತಿದ್ದ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಥಳೀಯ ಜನರ ಅಪೇಕ್ಷೆಯಂತೆ ಸಾರ್ವಜನಿಕರ ಒತ್ತಾಯದ ಮೇರೆಗೆ 12 ವರ್ಷಗಳ ನಂತರ ನೆಹರೂ ಸ್ಟೇಡಿಯಂನಲ್ಲಿ ಆಚರಿಸಲು ನಿರ್ಣಯಿಸಲಾಗಿದೆ ಎಂದ ಅವರು ಸ್ಟೇಡಿಯಂನಲ್ಲಿನ ಸಿಂಥೆಟಿಕ್ ಟ್ರಾಕ್ ಹಾನಿಗೊಳಗಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಈ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದವರು ನುಡಿದರು.
ಸ್ವಾತಂತ್ರ ದಿನಾಚರಣೆಯ ಮುನ್ನಾ ದಿನದಂದು ನಗರದ ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ಕಚೇರಿ ಕಟ್ಟಡಗಳನ್ನು ನಗರದ ಪ್ರಮುಖ ವರ್ತುಲಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಸ್ಥಳೀಯ ಸರ್ಕಾರೇತರ ಸಂಘ-ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳೂ ಸಹ ಈ ಸಂಭ್ರಮಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.