ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
“2005ರ ನವೆಂಬರ್‌ನಲ್ಲಿ ಸರ್ಕಾರ ರಚನೆಯಾದಾಗಿನಿಂದ ನಾವು ಆರೋಗ್ಯ ಸೇವೆಗಳನ್ನು ಸುಧಾರಿಸಲು ವ್ಯಾಪಕವಾಗಿ ಕೆಲಸ ಮಾಡಿದ್ದೇವೆ. ಆಶಾ ಮತ್ತು ಮಮತಾ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅವರ ಗೌರವಧನವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ,” ಎಂದು ನಿತೀಶ್ ಕುಮಾರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಈಗಿನ 1,000 ರೂ. ಬದಲಿಗೆ 3,000 ರೂ. ಗೌರವಧನ ನೀಡಲಾಗುವುದು. ಮಮತಾ ಕಾರ್ಯಕರ್ತರಿಗೆ ಪ್ರತಿ ಹೆರಿಗೆಗೆ 300 ರೂ. ಬದಲಿಗೆ 600 ರೂ. ಗೌರವಧನ ನೀಡಲು ನಿರ್ಧರಿಸಲಾಗಿದೆ. “ಇದರಿಂದ ಆಶಾ ಮತ್ತು ಮಮತಾ ಕಾರ್ಯಕರ್ತರ ಮನೋಸ್ಥೈರ್ಯ ಹೆಚ್ಚುತ್ತದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳು ಬಲಿಷ್ಠಗೊಳ್ಳುತ್ತವೆ,” ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?
ಇತ್ತೀಚೆಗೆ, ಬಿಹಾರ ಸಚಿವ ಸಂಪುಟವು ಗೃಹ ಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್‌ವರೆಗಿನ ಉಚಿತ ವಿದ್ಯುತ್ ವಿತರಣೆಯ ಪ್ರಸ್ತಾಪಕ್ಕೆ ಅನುಮೋದನೆ ನೀಡಿತ್ತು. ಈ ಯೋಜನೆ ಆಗಸ್ಟ್ 1ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿತ್ತು.
ಜುಲೈ 18ರಂದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ 7,200 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳಿಗೆ ಚಾಲನೆ ನೀಡಿದ್ದರು.