- ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ ನಾಗೇಶ್
- ದೇವನಹಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕರೊಬ್ಬರು ತಡರಾತ್ರಿ ಡಿಪೋ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಸಿಬ್ಬಂದಿಗೆ ಡ್ಯೂಟಿ ನೀಡಿರಲಿಲ್ಲ ಎಂದು ತಿಳಿದುಬಂದಿದೆ.
ದೇವನಹಳ್ಳಿ ಪಟ್ಟಣದ ಹಳೆಯ ಬಸ್ ನಿಲ್ದಾಣದ ಡಿಪೋ ಬಳಿ ಈ ಘಟನೆ ನಡೆದಿದೆ. ನಾಗೇಶ್(45) ಮೃತ ವ್ಯಕ್ತಿ. ಇವರು ಮೂಲತಃ ಆವತಿ ಗ್ರಾಮದವರು. ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಧ್ಯರಾತ್ರಿ ನಾಗೇಶ್ ಡಿಪೋ ಮ್ಯಾನೇಜರ್ ಕೊಠಡಿಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಪಾಳಿಯ ಕೆಲಸಕ್ಕೆ ಬಂದ ಸಿಬ್ಬಂದಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತ ವ್ಯಕ್ತಿ ನಾಗೇಶ್ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಹಾಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ದೇವನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರೋಣೋತ್ತರ ಪರೀಕ್ಷೆಗೆ ವರ್ಗಾಯಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬಾಕಿ ಬಿಲ್ | ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ: ಗುತ್ತಿಗೆದಾರರ ಸಂಘ
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಬಿಎಂಟಿಸಿ ಸಿಬ್ಬಂದಿಯೊಬ್ಬರು ಮಾತನಾಡಿ, “ನಾಗೇಶ್ ಮೂರು ದಿನ ಕುಟುಂಬದ ಸಮಸ್ಯೆಯಿಂದ ರಜೆ ತೆಗೆದುಕೊಂಡಿದ್ದರು. ಬಳಿಕ ಅವರಿಗೆ ಒಂದು ವಾರಗಳ ಕಾಲ ಡ್ಯೂಟಿ ನೀಡಿಲ್ಲ. ಇದರಿಂದ ಅವರು ಮಾನಸಿಕವಾಗಿ ನೊಂದಿದ್ದರು. ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಕೂಡ ಮಾನಸಿಕವಾಗಿ ನೊಂದಿದ್ದಾರೆ. ಅವರಿಗೆ ರಜೆ, ಡ್ಯೂಟಿ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಆದರೆ, ಯಾವ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ. ಸಿಬ್ಬಂದಿಗೆ ಕೌನ್ಸೆಲಿಂಗ್ ಅಗತ್ಯವಿದೆ” ಎಂದು ತಿಳಿಸಿದರು.
ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದ ನಾಗೇಶ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.