ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ.
ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಧರ್ಮಸ್ಥಳ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ ಕಮ್ಮರಡಿ, ಕದ್ರಾ, ಹೊನ್ನಾವರ, ಭಾಗಮಂಡಲ, ಆಗುಂಬೆ, ಸಿದ್ದಾಪುರ, ಮೂಡುಬಿದಿರೆ, ಗೇರುಸೊಪ್ಪ, ಶೃಂಗೇರಿ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೋಕ್ಲು, ಲೋಂಡಾ ಹಾಗೂ ಕಳಸದಲ್ಲಿ ಶುಕ್ರವಾರ ಮಳೆಯಾಗಿದೆ.
ಬೆಂಗಳೂರು ವಾತಾವರಣ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 29 ಡಿಗ್ರ ಸೆಲ್ಸಿಯಸ್ ಗರಿಷ್ಠ ಮತ್ತು 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.