ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕಲಬುರಗಿ ನಗರದಲ್ಲಿ ಮಾದಿಗ ಮಹಾ ಒಕ್ಕೂಟದ ಕಾರ್ಯಕರ್ತರು ಬೃಹತ್ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಗತ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ʼಜೈ ಮಾದಿಗ ಜೈ ಜೈ ಮಾದಿಗʼ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ತಡೆದರು.ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಸಲ್ಲಿಸಿದರು.
ಮುಖಂಡರು ಮಾತನಾಡಿ, ʼಕಳೆದ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಪರಿಶಿಷ್ಟ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ದತ್ತಾಂಶಗಳ ಆಧಾರದ ಮೇಲೆ ಆಯಾ ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಿ ಎಂದು ತೀರ್ಪು ನೀಡಿದರೂ ರಾಜ್ಯ ಸರ್ಕಾರ ಕುಂಟು ನೆಪವೊಡ್ಡಿ ವಿಳಂಬ ನೀತಿ ಅನುಸರಿಸುತ್ತಿದೆʼ ಎಂದು ಖಂಡಿಸಿದರು.
ʼಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿಯಲ್ಲಿವೆ. ಇದೇ ಆಗಸ್ಟ್ 11ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಸರ್ಕಾರ ವಿಳಂಬ ಮಾಡದೇ ಒಳಮೀಸಲಾತಿ ಜಾರಿ ಮಾಡಬೇಕುʼ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಕಲಬುರಗಿ | ಕೇಂದ್ರೀಯ ವಿವಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಕದಸಂಸ ಆಗ್ರಹ
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯ ಹಿರಿಯ ಮುಖಂಡರು, ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.