“ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದರು.
ಗದಗ ಪಟ್ಟಣದ ಪರಿಶಿಷ್ಟ ಜಾತಿಗಳ ಜನಸಂಖ್ಯೆಯ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಮುಖಂಡರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಮುಳಗುಂದನಾಕಾ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.
“ಪರಿಶಿಷ್ಟ ಜಾತಿಗಳಲ್ಲಿ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಒಳ ಮೀಸಲಾತಿ ಅವಶ್ಯಕತೆ ಇದೆ. ಒಳ ಮೀಸಲಾತಿ ಬೇಡಿಕೆ ಮತ್ತು ಹೋರಾಟ 35 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ಸಹ ನೀಡಿದೆ. ಆದರೆ, ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.
“ಆ. 11ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
“ನಾವು ಈ ಹೋರಾಟದ ಮೂಲಕ ಯಾರ ಆಸ್ತಿಯನ್ನೂ ಕೇಳುತ್ತಿಲ್ಲ. ಸಾಮಾಜಿಕ ನ್ಯಾಯ ಕೇಳುತ್ತಿದ್ದೇವೆ. ಇದಕ್ಕಾಗಿ 30 ವರ್ಷಗಳ ಕಾಲ ಬೀದಿಯಲ್ಲಿ ನಿಂತು ಹೋರಾಡಿದ್ದೇವೆ. ಆದರೆ, ಅಧಿಕಾರಕ್ಕೆ ಬಂದ ಸರ್ಕಾರಗಳೆಲ್ಲವೂ ನಮಗೆ ನ್ಯಾಯ ಕೊಡದೇ ವಂಚಿಸಿವೆ’ ಎಂದು ಮಾದಿಗ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
‘ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ತಾವು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆದುಕೊಳ್ಳುತ್ತಾರೆ. ಆದರೆ, ನಮ್ಮ ವಿಚಾರದಲ್ಲಿ ಎಲ್ಲಿದೆ ಅವರ ಸಾಮಾಜಿಕ ನ್ಯಾಯ? ಅಧಿಕಾರದ ದಾಹದಿಂದ ಸುಳ್ಳು ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ’ ಎಂದು ಹರಿಹಾಯ್ದರು.
‘ಒಳ ಮೀಸಲಾತಿಗೆ ಆಗ್ರಹಿಸಿ 2016ರಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುವಾಗ ಎಂಟು ಜನರು ಮೃತಪಟ್ಟರು. ಅವರ ಸಾವಿಗೆ ಬೆಲೆ ಇಲ್ಲವೇ? ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ ನ್ಯಾಯವನ್ನು ಕೇಳಿದ್ದೇವೆಯೇ ವಿನಹ ನಾವು ಮತ್ತೇನೂ ಕೇಳುತ್ತಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಒಳ ಮೀಸಲಾತಿ ಜಾರಿ ಮಾಡುವಂತೆ ಪ್ರತಿಭಟನೆ, ಆ 15ರ ವರೆಗೆ ಗಡುವು
ಪ್ರತಿಭಟನೆಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಮುಖಂಡ ಉಡಚಪ್ಪ ಹಳ್ಳಿಕೇರಿ, ರಾಘವೇಂದ್ರ ಪರಾಪೂರ, ಭೀಮಪ್ಪ ಮಾದರ, ನಿಂಗಪ್ಪ ದೊಡ್ಡಮನಿ, ಪ್ರವಣ ವಡ್ಡಟ್ಟಿ, ಚಂದ್ರಶೇಖರ ಹರಿಜನ, ಡಿ.ಜಿ.ಕಟ್ಟಿಮನಿ, ಬಸವರಾಜ ಮುಳ್ಳಾಳ, ಅಶೋಕ ಕುಡತಿನಿ, ಮಂಜು ಬುರಡಿ, ಮಂಜು ಕೋಟ್ನೇಕ್, ಚಂದ್ರಶೇಖರ ಮಾದರ, ಪಡಿಯಪ್ಪ ಪೂಜಾರ, ಗಣೇಶ ಹುಬ್ಬಳ್ಳಿ, ಸುರೇಶ ಹಾದಿಮನಿ, ರವಿ ಮಾದರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.