ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ವರ್ಷದ ಜನವರಿಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ನಿವೃತ್ತ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿತ್ತು. ರಾಜ್ಯದಲ್ಲಿ ನಿಖರವಾದ ದತ್ತಾಂಶ ಇಲ್ಲದ ಕಾರಣ ಹೊಸದಾದ ಸಮೀಕ್ಷೆ ನಡೆಸಬೇಕೆಂದು ಮಾರ್ಚ್‌ನಲ್ಲಿ ಆಯೋಗವು ಮಧ್ಯಂತರ ವರದಿ ಸಲ್ಲಿಸಿತ್ತು. ಸಂಪುಟ ವರದಿಯನ್ನು ಒಪ್ಪಿ ಸಮೀಕ್ಷೆಗೆ ನಿರ್ಣಯಿಸಿತ್ತು.
ಇದನ್ನು ಓದಿದ್ದೀರಾ? ಒಳಮೀಸಲಾತಿ ಜಾರಿ : ಜಸ್ಟಿಸ್ ನಾಗಮೋಹನ ದಾಸ್ ಆಯೋಗದ ಮುಂದಿವೆ ಕೆಲ ಪ್ರಶ್ನೆ
ಅದರಂತ ಮೇ 5ರಿಂದ ಜುಲೈ 6ರವರೆಗೆ ಸಮೀಕ್ಷೆ ನಡೆಸಿದ್ದು ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1.07,01,982 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ವರದಿಯು ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು ಆರು ಶಿಫಾರಸುಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.

ಇನ್ನು ವರದಿ ಸಲ್ಲಿಸಿದ ಸಂದರ್ಭದಲ್ಲಿ ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
