ತನ್ನ ಭಾವಿ ಪತಿಯೊಂದಿಗೆ ಬೆಟ್ಟ ಹತ್ತಲು ತೆರಳಿದ್ದ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕನ ಮೇಲೂ ಕಾಮುಕರು ಹಲ್ಲೆ ನಡೆಸಿದ್ದಾರೆ.
ಘಟನೆಯು ಸಿಧಿ ಜಿಲ್ಲೆಯ ಸೆಮಾರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಮತ್ತು ಯುವಕ ಕಥೌಥಾ ಬಳಿಯ ಬೆಟ್ಟಕ್ಕೆ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ, ನಾಲ್ವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿದ್ದು, ಯುವಕನಿಂದ ಥಳಿಸಿದ್ದು, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿ ಮತ್ತು ಯುವಕ ಸೆಮಾರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಿಧಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಶ್ರೀವಾಸ್ತವ ತಿಳಿಸಿದ್ದಾರೆ.
ಘಟನೆ ಕುರಿತಾಗಿ ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ದೀರ್ಘಾವಧಿಯ ಆಡಳಿತದಲ್ಲಿ ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಶೋಚನೀಯ ಸ್ಥಿತಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
“ಘಟನೆಯು ಅಮಾನವೀಯ ಮತ್ತು ನಾಚಿಕೆಗೇಡಿನ ಕೃತ್ಯವಾಗಿದೆ. ಮಧ್ಯಪ್ರದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ 7,418 ದಲಿತ ಮತ್ತು ಬುಡಕಟ್ಟು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ, 338 ಸಾಮೂಹಿಕ ಅತ್ಯಾಚಾರಗಳು ಹಾಗೂ 558 ಕೊಲೆ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸರಾಸರಿ 7 ದಲಿತ-ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇದು, ಬಿಜೆಪಿ ಸರ್ಕಾರದ ವೈಫಲ್ಯವನ್ನು ಬಹಿರಂಗಗೊಳಿಸಿದೆ” ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಕಿಡಿಕಾರಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.