ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲೆಗಳಲ್ಲಿ ಧ್ವಜಾರೋಹನ ಮಾಡಲು ಹಾಸನ ಮತ್ತು ಬಳ್ಳಾರಿ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರನ್ನು ಸಿಎಂ ಸಿದ್ದರಾಮಯ್ಯ ನೇಮಿಸಿದ್ದಾರೆ.
ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಉಸ್ತುವಾರಿ ಸ್ಥಾನವೂ ಹೋಗಿತ್ತು. ಬಳಿಕ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಿಎಂ ನೇಮಿಸಿದ್ದರು. ಈಗ ರಹೀಂ ಖಾನ್ ಅವರಿಗೆ ಈ ಸ್ಥಾನ ಒಲಿದಿದೆ.
ಹಾಸನ ಜಿಲ್ಲೆಯ ಉಸ್ತುವಾರಿಯಾಗಿದ್ದ ಕೆ.ಎನ್. ರಾಜಣ್ಣ ಅವರು ಜಿಲ್ಲೆಯನ್ನೇ ಮರೆತಿದ್ದಾರೆ ಎನ್ನುವ ಆರೋಪಗಳು ಜನಪ್ರತಿನಿಧಿಗಳಿಂದ ವ್ಯಕ್ತವಾಗಿದ್ದವು. ಈಗ ರಾಜಣ್ಣ ಬದಲು ಕೃಷ್ಣ ಬೈರೇಗೌಡ ಹಾಸನದ ಜಿಲ್ಲಾ ಉಸ್ತುವಾರಿಯಾಗಿದ್ದಾರೆ.
