“”ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ ಧರಣಿಯನ್ನು ನೆಡೆಸಲಾಗುತ್ತಿದೆ” ಎಂದು ಚಿತ್ರದುರ್ಗದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ತಿಳಿಸಿದರು..
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ರಾಜ್ಯದಾದ್ಯಂತ 2025, ಆಗಸ್ಟ್ 12 ರಿಂದ 14ನೇ ತಾರೀಕಿನವರೆಗೆ ಮೂರು ದಿನಗಳ ಕಾಲ ಅಹೋ ರಾತ್ರಿ ಧರಣಿಯನ್ನು ಎಲ್ಲಾ ಜಿಲ್ಲಾ ಕಚೇರಿಗಳ ಮುಂಭಾಗ ನೆಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ, ಚಿತ್ರದುರ್ಗದಲ್ಲಿಯೂ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

“ನಮ್ಮ ಬೇಡಿಕೆಗಳಾದ ಮುಖ್ಯಮಂತ್ರಿಗಳು ಘೋಷಿಸಿದ – ರಾಜ್ಯದ ಗೌರವಧನ & ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ – ಮಾಸಿಕ ಕನಿಷ್ಟ ರೂ.10,000 ಗೌರವ ಧನ ಈ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ಕಳೆದ ಬಜೆಟ್ ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1,000 ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು. ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕ ಆಶಾ ಪರ್ಫಾಮೆನ್ಸ್ ಅಪ್ರೈಸಲ್ ಕೈಬಿಟ್ಟು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಿ. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. 2025ರಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಆಶಾ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎನ್ನುವ ಹಾಗೂ ಇನ್ನಿತರ ಬೇಡಿಕೆಗಳಿಗಾಗಿ ಧರಣಿ ಪ್ರಾರಂಭಿಸಲಿದ್ದೇವೆ. ನಮ್ಮ ಬೇಡಿಕೆಗಳಿಗೆ ಕೂಡಲೇ ಸರ್ಕಾರ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಪದಾಧಿಕಾರಿಗಳು ಭಾಗವಹಿಸಿದ್ದರು.