ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿಯಿಂದ ನಡೆದುಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ಷೇಪಿಸಿದ್ದಾರೆ.
ಸೋಮವಾರ ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, “ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು” ಎಂದು ಆರೋಪಿಸಿದರು.
“ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ” ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.