ರಾಜ್ಯದ ಕುರಿಗಾಯಿಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅವರಿಗಾಗಿ ಪ್ರತ್ಯೇಕವಾಗಿ ಕುರಿಗಾಹಿಗಳ ಹಿತರಕ್ಷಣಾ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ಆ.19ರಂದು ರಾಜ್ಯದ ʼಕುರಿಗಾಹಿಗಳ ನಡೆ ವಿಧಾನಸೌಧದ ಕಡೆʼ ಹೋರಾಟ ನಡೆಸಲಾಗುವುದು ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ರಾಜ್ಯ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಶೋಷಣೆ, ಅತ್ಯಾಚಾರ, ಕೊಲೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು. ಇದೇ ತಿಂಗಳ 19ರಂದು ನಡೆಯುವ ಈ ಹೋರಾಟದಲ್ಲಿ ರಾಜ್ಯದ ವಿವಿಧ ಕಡೆಯಿಂದ 2 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವ ಕುರಿತು ಘೋಷಣೆ ಮಾಡಿದೆ. ಅದರಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚೆ ಮಾಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಕುರಿಗಾಹಿಗಳನ್ನು ರಕ್ಷಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷ ಡಿ ಬಿ ಸಿದ್ದಾಪುರ, ಸಿದ್ದಪ್ಪ ಬಳಗಾನೂರ, ಶಿವಲಿಂಗ ನಿಂಗನೂರ, ಸದಾಶಿವ ತಮ್ಮಾಪುರ, ಪರಶುರಾಮ ಮಂಟೂರ ಮುಂತಾದವರು ಉಪಸ್ಥಿತರಿದ್ದರು.
ಇದನ್ನು ಓದಿ: ಬಾಗಲಕೋಟೆ | ರ‍್ಯಾಗಿಂಗ್ ಕಾಟಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ