ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಇಂದು ಅಹಿತಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸ್ಫೋಟದಂತೆ ಕಂಡುಬಂದಿದೆ. ಕಸ್ತೂರಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದಾನೆ. 9 ಜನ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು, ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ
ಸಂಜಯ್ ಗಾಂಧಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಗಾಯಾಳುಗಳ ಪೈಕಿ 60 ವರ್ಷದ ಸರಸಮ್ಮ ಸ್ಥಿತಿ ಗಂಭೀರವಾಗಿದೆ. ಪ್ರಮೀಳಾ(40) ಹಾಗೂ ರಾಜೇಶ್(38) ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಮಾತನಾಡಿ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಂದು ಮಗು ಮೃತಪಟ್ಟಿದೆ, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ 6 ರಿಂದ 7 ಮನೆಗಳಿಗೆ ಹಾನಿಯಾಗಿದೆ. 5 ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಸ್ಫೋಟ ಯಾವ ರೀತಿಯಾಗಿದೆ ಅಂತಾ ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲ. ಮನೆಯಿಂದ ಹಾನಿ ಆಗಿರುವ ಬಗ್ಗೆ ತನಿಖೆ ನಡೆಸುತ್ತೇವೆ. ಸ್ಫೋಟವಾದಾಗ ತಾಯಿ ಮತ್ತು ಮಗು ಮಾತ್ರ ಇದ್ದರು. ಅವಶೇಷಗಳನ್ನು ಸ್ವಚ್ಛ ಮಾಡಿದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.